ಬೀದರ್: ತಾಲೂಕಿನ ಬಗದಲ ಗ್ರಾಮದ ಸರ್ಕಾರಿ ಪ್ರಾಥಮಿಕ ಕನ್ನಡ ಹಾಗೂ ಉರ್ದು ಮಾಧ್ಯಮ ಶಾಲೆಯಲ್ಲಿ ನೂರಾರು ಮಕ್ಕಳು ಹಾಜರಿದ್ದರೂ ಬಿಸಿಯೂಟ ತಯಾರಿಸದೆ ವಿದ್ಯಾರ್ಥಿಗಳನ್ನು ಉಪವಾಸ ಕೆಡವಿರುವ ಘಟನೆ ಬೆಳಕಿಗೆ ಬಂದಿದೆ.
ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿರುವ ಈ ಶಾಲೆಯಲ್ಲಿ ಇಂದು ದಿನಾಂಕ 03-09-2026ರಂದು 246 ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದರು. ಆದರೆ ಮಧ್ಯಾಹ್ನವಾದರೂ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಸಿದ್ಧಪಡಿಸದೆ ಅಡುಗೆ ಸಿಬ್ಬಂದಿ ಹಾಗೂ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ.
ವಿಷಯ ತಿಳಿದು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಭೀಮ್ ಆರ್ಮಿ ಸಂಘಟನೆಯ ಬೀದರ್ ಜಿಲ್ಲಾ ಉಪಾಧ್ಯಕ್ಷರಾದ ಗೌತಮ್ ಬಗದಲ ಅವರು ಶಾಲಾ ಆಡಳಿತದ ಬೇಜವಾಬ್ದಾರಿತನವನ್ನು ತೀವ್ರವಾಗಿ ಖಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಸರ್ಕಾರ ಬಡ ಮಕ್ಕಳ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಬಿಸಿಯೂಟ ಯೋಜನೆ ಜಾರಿಗೆ ತಂದಿದೆ. ಆದರೆ 240ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಬಂದಿದ್ದರೂ ಊಟ ತಯಾರು ಮಾಡದಿರುವುದು ಅಧಿಕಾರಿಗಳ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ. ಇಂತಹ ಘಟನೆಗಳು ಪುನರಾವರ್ತನೆಯಾದರೆ ಭೀಮ್ ಆರ್ಮಿ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು," ಎಂದು ಎಚ್ಚರಿಕೆ ನೀಡಿದ್ದಾರೆ.
ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಹಾಗೂ ಸಂಘಟನೆಯ ಮುಖಂಡರು ಒತ್ತಾಯಿಸಿದ್ದಾರೆ.
ದಾರಿ