ಬೀದರ್: ಬೀದರ್ ಶಾಸಕ ರಹೀಂಖಾನ್ ಅವರಿಗೆ ಸಚಿವ ಸ್ಥಾನ ನೀಡುವ ಸಂಬಂಧ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಲು ಜೂನ್ 23 ರಂದು ನವದೆಹಲಿಗೆ ಕಾಂಗ್ರೆಸ್ ಮುಖಂಡರ ನಿಯೋಗ ಒಯ್ಯಲಾಗುವುದು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿಯಾಗಿ, ರಹೀಂಖಾನ್ ಅವರಿಗೆ ಸಚಿವ ಸ್ಥಾನ ನೀಡಲು ಕೋರಲಾಗುವುದು ಎಂದು ಹೇಳಿದ್ದಾರೆ.
ರಹೀಂಖಾನ್ ಅವರು ನಾಲ್ಕು ಸಲ ಶಾಸಕ, ಎರಡು ಬಾರಿ ಸಚಿವರಾಗಿ ಜನ ಪರ ಕಾರ್ಯ ಕೈಗೊಂಡಿರುವುದು, ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ನ ಐವರು ಸಂಸದರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ವರಿಷ್ಠರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಹೀಂಖಾನ್ ಅವರಿಗೆ ಸಚಿವ ಸ್ಥಾನ ನೀಡಿದರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ಕಲ್ಪಿಸಿಕೊಟ್ಟಂತೆ ಆಗುತ್ತದೆ. ಕಲ್ಯಾಣ ಕರ್ನಾಟಕ ಭಾಗ ಹಾಗೂ ರಾಜ್ಯದ ಅಭಿವೃದ್ಧಿಗೆ ನೆರವಾಗುತ್ತದೆ. 2028ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ.
ದಾರಿ